
ಹನೂರು ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ಇರುವ ಸರ್ಕಾರಿ ಶಾಲೆಯ ಜಾಗ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡ ನಿರ್ಮಾಣ ಸಾಧ್ಯವಾಗಿಲ್ಲ. ಜೊತೆಗೆ ಕುಡಿಯುವ ನೀರು, ಶೌಚಗೃಹ ಸೌಲಭ್ಯಗಳಿಲ್ಲದ ಕಾರಣದಿಂದ ಆಗಸ್ಟ್ 11ರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವುದನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಆ.14ರಂದು ಜಿಲ್ಲಾಮಟ್ಟದ ಅಧಿಕಾರಿಗಳಾದ ಜಿಪಂ ಸಿಇಒ ಮೋನಾ ರೋತ್, ಡಿಡಿಪಿಐ ರಾಮಚಂದ್ರರಾಜೇ ಅರಸ್, ತಹಸೀಲ್ದಾರ್ ಚೈತ್ರಾ, ಬಿಇಒ ಗುರುಲಿಂಗಯ್ಯ ಹಾಗೂ ತಾಪಂ ಇಒ ಉಮೇಶ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಮಸ್ಯೆ ಬಗೆಹರಿಸಲು ವಾಗ್ದಾನ ನೀಡಲಾಗಿದ್ದರೂ, ಸ್ಪಷ್ಟ ನಿರ್ಧಾರವಾಗದ ಕಾರಣ ಪೋಷಕರ ಅಸಮಾಧಾನ ಮುಂದುವರಿದಿತ್ತು.
ಬುಧವಾರದಂದು ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ ಅವರು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ತಾತ್ಕಾಲಿಕವಾಗಿ ಕೊಠಡಿಗಳನ್ನು ರಿಪೇರಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಒಟ್ಟು 62 ವಿದ್ಯಾರ್ಥಿಗಳ ಪೈಕಿ 50 ಮಕ್ಕಳು ಹಾಜರಿದ್ದು ಸಂತಸದ ವಿಚಾರವಾಗಿದೆ.